ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರಷ್ಟೇ ಚರ್ಚೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧದ ಹೋರಾಟದ ಕುರಿತು ತಮಿಳುನಾಡು ಸರ್ಕಾರ ನೀಡಿರುವ ಆಹ್ವಾನದ ಬಗ್ಗೆ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ತಮಿಳುನಾಡಿನ ಅರಣ್ಯ ಸಚಿವ ಪೊನ್ನುಮುಡಿ ಮತ್ತು ರಾಜ್ಯಸಭೆ ಸದಸ್ಯ ಎಂ.ಎಂ. ಅಬ್ದುಲ್ಲ ಅವರನ್ನು ಭೇಟಿ ಮಾಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, "ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ ಹೆಸರಲ್ಲಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡುವ ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪವಿದೆ. ಈ ಕ್ರಮ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಹುದು," ಎಂದು ಹೇಳಿದರು.
ಜಂಟಿ ಹೋರಾಟ ಸಮಿತಿ ರಚನೆ
ಲೋಕಸಭಾ ಕ್ಷೇತ್ರ ಮರುವಿಂಗಡಣೆಯ ವಿರುದ್ಧ ಹೋರಾಡಲು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಜಂಟಿ ಹೋರಾಟ ಸಮಿತಿ ರಚನೆಗೆ ಮುಂದಾಗಿದ್ದಾರೆ. ಈ ಸಂಬಂಧ ಚರ್ಚಿಸಲು ಇದೇ ತಿಂಗಳು 22ರಂದು ಚೆನ್ನೈನಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸುವ ಕುರಿತು ಹೈಕಮಾಂಡ್ ನಾಯಕರ ಮಾರ್ಗದರ್ಶನದಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆ ಮೇಲಿನ ಸ್ಪಷ್ಟನೆ
ಇದೇ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪ್ರಗತಿಯ ಕುರಿತಂತೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ, "ಈ ಯೋಜನೆ ಶೀಘ್ರ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಬಾಕಿ ಉಳಿದ ಸಮಸ್ಯೆಗಳನ್ನು ಮುಂದಿನ ಆರು ತಿಂಗಳಲ್ಲಿ ಇತ್ಯರ್ಥಪಡಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಬಿಡಲು ನಮ್ಮ ಗುರಿಯಾಗಿದೆ," ಎಂದು ಭರವಸೆ ನೀಡಿದರು.
ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು, ಈ ಬಗ್ಗೆ ಸರಕಾರದಿಂದ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಈ ನಿರ್ಧಾರಗಳು ರಾಜ್ಯದ ಹಿತವನ್ನು ಸಮರ್ಥಿಸುವ ರೀತಿಯಲ್ಲಿ ಇರಲಿವೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.
ವರದಿ:ಡಿ.ಪಿ ಅರವಿಂದ್

