ಪರಿಸರ ಉಳಿದರೆ ಭವಿಷ್ಯ ಉಜ್ವಲ: ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣಾ ಪ್ರತಿಜ್ಞೆ

ವಿಶ್ವ ಪರಿಸರ ದಿನಾಚರಣೆ ಅರ್ಥಪೂರ್ಣ ಆಚರಣೆ: ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಕರೆ

ಶಿವಮೊಗ್ಗ, ಜೂನ್‌ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ (MY Bharat) ಶಿವಮೊಗ್ಗ ಹಾಗೂ ಮುಖಾಮುಖಿ ಎಸ್.ಟಿ. ರಂಗತಂಡ (ರಿ.), ಶಿವಮೊಗ್ಗ ಇವರ ಸಹಯೋಗದಲ್ಲಿ ಬೊಮ್ಮನಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ ಪರಿಸರ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ಪರಿಸರ ಮಾಲಿನ್ಯ, ಹವಾಮಾನ ಬದಲಾವಣೆ ಮತ್ತು ಹಸಿರು ಸಂಪತ್ತಿನ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಪ್ರತಿಜ್ಞೆಯನ್ನು ಸ್ವೀಕರಿಸಿ, ಪ್ರಕೃತಿ ಉಳಿವಿಗಾಗಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೇರಾ ಯುವ ಭಾರತ್ ಶಿವಮೊಗ್ಗ ಜಿಲ್ಲಾ ಅಧಿಕಾರಿಗಳಾದ ಐಶ್ವರ್ಯ ಶ್ರೀನಿವಾಸ್ ಮಾತನಾಡಿ, ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಯುವಜನರು ಹಾಗೂ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ನಿಲ್ಲಬೇಕೆಂದು ಕರೆ ನೀಡಿದರು.

ಚಾರ್ಟರ್ಡ್ ಅಕೌಂಟೆಂಟ್ ಮಹೇಂದ್ರ ಮಾತನಾಡಿ, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ತಮ್ಮ ಮನೆ, ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಕೊಡುಗೆ ನೀಡಬೇಕೆಂದರು.

ರಂಗ ನಿರ್ದೇಶಕರಾದ ಮಂಜು ರಂಗಾಯಣ ಪರಿಸರ ಮತ್ತು ಮಾನವ ಜೀವನದ ಅವಿನಾಭಾವ ಸಂಬಂಧದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ, ಪ್ರಕೃತಿಯೊಂದಿಗೆ ಹೊಂದಾಣಿಕೆಯ ಜೀವನಶೈಲಿಯ ಅಗತ್ಯತೆಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮೀನಾಕ್ಷಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕೊನೆಯಲ್ಲಿ ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗದೇ, ಪ್ರತಿನಿತ್ಯದ ಜೀವನದ ಭಾಗವಾಗಬೇಕು. ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಹಸಿರು ಮತ್ತು ಆರೋಗ್ಯಕರ ಭವಿಷ್ಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು.

ವರದಿ: ಡಿ.ಪಿ ಅರವಿಂದ್‌ ಎಫ್‌7ನ್ಯೂಸ್.ಇನ್‌ ಶಿವಮೊಗ್ಗ

Post a Comment

Previous Post Next Post