ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ₹80 ಸಾವಿರ ಕಳವು ಪ್ರಕರಣ ಭೇದಿಸಿದ ಪೊಲೀಸರು – ಭದ್ರಾವತಿಯ ಮೂವರು ಮಹಿಳೆಯರ ಬಂಧನ
ಕೊಲ್ಲೂರು / ಶಿವಮೊಗ್ಗ | ವರದಿ: ಡಿ.ಪಿ. ಅರವಿಂದ್ | F7 NEWS
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ಕಳವು ಮಾಡಿದ್ದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಭದ್ರಾವತಿ ಮೂಲದ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಭದ್ರಾವತಿಯ ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಎಂದು ಪೊಲೀಸರು ಗುರುತಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸರು ನೀಡಿರುವ ಮಾಹಿತಿಯಂತೆ, ಜುಲೈ 5ರಂದು ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಆಗಮಿಸಿದ್ದರು. ಬೆಳಿಗ್ಗೆ ಸುಮಾರು 8.20ರ ವೇಳೆಗೆ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ನಿಮಿಶಾ ಅವರ ಕಂದು ಬಣ್ಣದ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ.
ಬ್ಯಾಗ್ ಪರಿಶೀಲಿಸಿದ ವೇಳೆ ಅದರೊಳಗಿದ್ದ ₹80 ಸಾವಿರ ನಗದು ಹೊಂದಿದ್ದ ಪರ್ಸ್ ಕಾಣೆಯಾಗಿರುವುದು ತಿಳಿದುಬಂದಿದೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೊಲ್ಲೂರು ಪೊಲೀಸರು ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿ ಹಾಗೂ ಇತರೆ ತಾಂತ್ರಿಕ ಮಾಹಿತಿಗಳನ್ನು ಆಧರಿಸಿ ತನಿಖೆ ನಡೆಸಿದರು. ತನಿಖೆಯ ಫಲವಾಗಿ ಕೇವಲ 24 ಗಂಟೆಗಳಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಮಹಿಳೆಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಕುರಿತು ಕೊಲ್ಲೂರು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

