ಮಹಿಳಾ ವಿಶೇಷಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ: ಸಮಾಜಮುಖಿ ಕಾರ್ಯಕ್ಕೆ ಡಿ.ಎಸ್. ಅರುಣ್ ಶ್ಲಾಘನೆ
ಚಿತ್ರದುರ್ಗ, ಜು.16 ವರದಿ: ಡಿ.ಪಿ. ಅರವಿಂದ್: ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ, ಚಿತ್ರದುರ್ಗ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಅವರ 2025–26ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಯೋಜನೆಯಡಿ ಮಹಿಳಾ ವಿಶೇಷಚೇತನರಿಗೆ ರೆಟ್ರೋಫಿಟ್ ಕಿಟ್ ಸಹಿತ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಭಾಗವಹಿಸಿ ಮಾತನಾಡಿದರು.
ವಿಶೇಷಚೇತನರ ಜೀವನದಲ್ಲಿ ಸ್ವಾವಲಂಬನೆಯ ಹೊಸ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಅವರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಮಹಿಳಾ ವಿಶೇಷಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿರುವುದು ಅತ್ಯಂತ ಶ್ಲಾಘನೀಯ ಹಾಗೂ ಸಮಾಜಮುಖಿ ಕಾರ್ಯವಾಗಿದೆ ಎಂದು ಡಿ.ಎಸ್. ಅರುಣ್ ಹೇಳಿದರು.
ಈ ಯೋಜನೆಯು ಮಹಿಳಾ ವಿಶೇಷಚೇತನರ ಸಂಚಾರವನ್ನು ಸುಲಭಗೊಳಿಸುವುದರ ಜೊತೆಗೆ, ಆತ್ಮವಿಶ್ವಾಸ, ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ಹೊಸ ಚೈತನ್ಯ ನೀಡಲಿದೆ. ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಇಂತಹ ಮಾನವೀಯ ಕಾರ್ಯಕ್ರಮಗಳು ಇತರ ಜನಪ್ರತಿನಿಧಿಗಳಿಗೆ ಮಾದರಿಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಬಳ್ಳಾರಿ ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಕಾಶ್, ಯುವ ಉದ್ಯಮಿ ಅರುಣ್ ಸಂಪಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ ಹಾಗೂ ವಿಶೇಷಚೇತನರು ಮತ್ತು ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

