ಶಿವಮೊಗ್ಗ: ನಗರದ ಐತಿಹಾಸಿಕ ಗಾಂಧಿ ಪಾರ್ಕ್ ಪುನರ್ನಿರ್ಮಾಣ ಕಾಮಗಾರಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕಾಮಗಾರಿಗೆ ಮಹಾನಗರ ಪಾಲಿಕೆ ವತಿಯಿಂದ ₹1.70 ಕೋಟಿಗೂ ಅಧಿಕ ಹಣ ವ್ಯಯಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾಮಗಾರಿಯ ವಾಸ್ತವಿಕ ವೆಚ್ಚ ಇದಕ್ಕಿಂತ ಬಹಳ ಕಡಿಮೆ ಇರಬಹುದೆಂದು ಆರೋಪಿಸಿದ್ದಾರೆ.
ನಗರದ ಗಾಂಧಿ ಪಾರ್ಕ್ಗೆ ಸೋಮವಾರ ಬೆಳಗ್ಗೆ ಸುಮಾರು 7.30ಕ್ಕೆ ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಮನೋಹರ್ ಗೌಡ ನೇತೃತ್ವದ ತಂಡ ಭೇಟಿ ನೀಡಿ ಪುನರ್ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ಮನೋಹರ್ ಗೌಡ, ಗಾಂಧಿ ಪಾರ್ಕ್ ಪುನರ್ನಿರ್ಮಾಣ ಕಾಮಗಾರಿಗೆ ಮಹಾನಗರ ಪಾಲಿಕೆ ವತಿಯಿಂದ ₹1.70 ಕೋಟಿಗೂ ಅಧಿಕ ಹಣ ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಇದೆ. ಆದರೆ ಸ್ಥಳ ಪರಿಶೀಲನೆ ನಡೆಸಿದಾಗ ಸುಮಾರು ₹60 ಲಕ್ಷದಷ್ಟು ವೆಚ್ಚವಾಗಿರಬಹುದೆಂಬ ಅನುಮಾನ ಮೂಡುತ್ತಿದೆ. ಉಳಿದ ಒಂದು ಕೋಟಿಗೂ ಅಧಿಕ ಮೊತ್ತದ ಹಣದ ಬಳಕೆಯ ಬಗ್ಗೆ ಅನುಮಾನಗಳಿದ್ದು, ಕಾಮಗಾರಿಯಲ್ಲಿ ಭ್ರಷ್ಟಾಚಾರದ ಆರೋಪಗಳು ಮೇಲ್ನೋಟಕ್ಕೆ ಕಂಡುಬರುತ್ತಿವೆ ಎಂದು ಹೇಳಿದರು.
ಈ ಕಾಮಗಾರಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಮನೋಹರ್ ಗೌಡ ತಿಳಿಸಿದರು.
ಇದೇ ವೇಳೆ ಆಮ್ ಆದ್ಮಿ ಪಕ್ಷದ ಯುವ ಘಟಕದ ಅಧ್ಯಕ್ಷ ಕಿರಣ್.ಕೆ ಮಾತನಾಡಿ, ಕಾಮಗಾರಿಯಲ್ಲಿ ಬಳಸಲಾಗಿರುವ ಕಬ್ಬಿಣದ ಗುಣಮಟ್ಟದ ಬಗ್ಗೆಯೂ ಅನುಮಾನವಿದೆ. ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳಲ್ಲಿ ಉಲ್ಲೇಖಿಸಿರುವ ಗುಣಮಟ್ಟಕ್ಕಿಂತ ಸ್ಥಳದಲ್ಲಿ ಬಳಸಲಾಗಿರುವ ಕಬ್ಬಿಣದ ಗುಣಮಟ್ಟ ಕಡಿಮೆಯಾಗಿದೆ ಎಂಬ ಆರೋಪವಿದೆ. ಈ ಬಗ್ಗೆ ತಾಂತ್ರಿಕ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮತ್ತೊಬ್ಬ ಮುಖಂಡ ನವಿಲೇಶ್ ಮಾತನಾಡಿ, ಮಕ್ಕಳಿಗಾಗಿ ನಿರ್ಮಿಸಲಾಗುತ್ತಿರುವ ಪಾರ್ಕ್ನ ಆಟಿಕೆಗಳು ಹಾಗೂ ಇತರ ಕಾಮಗಾರಿಗಳಲ್ಲಿಯೇ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವಾಗ, ಸಾರ್ವಜನಿಕರಿಗೆ ಸಂಬಂಧಿಸಿದ ಇತರ ಕಾಮಗಾರಿಗಳಲ್ಲಿ ಯಾವ ಮಟ್ಟಿಗೆ ಭ್ರಷ್ಟಾಚಾರ ನಡೆಯುತ್ತಿರಬಹುದು ಎಂಬ ಪ್ರಶ್ನೆ ಮೂಡುತ್ತದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಗಾಂಧಿ ಪಾರ್ಕ್ ನಗರದ ಪ್ರಮುಖ ಸಾರ್ವಜನಿಕ ಸ್ಥಳವಾಗಿದ್ದು, ಇದರ ಪುನರ್ನಿರ್ಮಾಣ ಕಾಮಗಾರಿಗೆ ಸಾರ್ವಜನಿಕ ಹಣ ಬಳಕೆಯಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿಯ ಗುಣಮಟ್ಟ, ಖರ್ಚಿನ ವಿವರ ಹಾಗೂ ಟೆಂಡರ್ ಮತ್ತು ಕಾಮಗಾರಿ ದಾಖಲೆಗಳನ್ನು ಪರಿಶೀಲಿಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.
ವರದಿ: ಡಿ.ಪಿ. ಅರವಿಂದ್
ಎಫ್7ನ್ಯೂಸ್, ಶಿವಮೊಗ್ಗ

